ಹಾಲ್ ಟಿಕೆಟ್ ತೋರಿಸಿದರೂ ಬಸ್ ಟಿಕೆಟ್ ಇಲ್ಲ
ಮೂಡಲಗಿ – ಇದೇ ದಿ. ೧೮ ರಿಂದ ಆರಂಭವಾಗಲಿರುವ ಹತ್ತನೇ ತರಗತಿಯ ಪರೀಕ್ಷೆಯ ಕುರಿತಂತೆ ಮೂಡಲಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಒಟ್ಟು ೨೨ ಪರೀಕ್ಷಾ ಕೇಂದ್ರಗಳಲ್ಲಿ ೭೧೯೫ ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಿದ್ದು ಯಾವುದೇ ಗೊಂದಲಗಳಿಲ್ಲದಂತೆ ಪಾರದರ್ಶಕವಾಗಿ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ ಹಿರೇಮಠ ಮಾಹಿತಿ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ನಗರ ಪ್ರದೇಶಗಳಲ್ಲಿ ೯ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ೧೩ ಪರೀಕ್ಷಾ ಕೇಂದ್ರಗಳಿವೆ. ಕೇಂದ್ರಗಳಿಗೆ ೨೨ ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಲಾಗಿದೆ, ೧೦ ಜನ ಉಪ ಮುಖ್ಯ ಅಧೀಕ್ಷಕರು ಹಾಗೂ ೨೨ ಜನ ಪ್ರಶ್ನೆ ಪತ್ರಿಕೆ ಪಾಲಕರನ್ನು ನೇಮಿಸಲಾಗಿದೆ ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ ಹೀಗಾಗಿ ೨೨ ಜನ ಮೊಬೈಲ್ ಸ್ವಾಧೀನಾಧಿಕಾರಿಗಳಿದ್ದಾರೆ. ತಾಲೂಕು ಹಂತದಲ್ಲಿ ದಂಡಾಧಿಕಾರಿಗಳು, ತಾಲೂಕಾ ಪಂಚಾಯಿತಿ ಅಧಿಕಾರಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇತೃತ್ವದ ವಿಚಕ್ಷಣ ದಳ ರಚಿಸಲಾಗಿದೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಕ್ಯಾಮರಾಗಳನ್ನು ಅಳವಡಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸಲಾಗಿದೆ ಎಂದರು.
ವಿದ್ಯಾರ್ಥಿಗಳ ಸೂಕ್ತ ಭದ್ರತೆಗೆ ಪೊಲೀಸ್ ಇಲಾಖೆಯವರೊಂದಿಗೆ ಮಾತುಕತೆ ನಡೆಸಲಾಗಿದೆ, ವಿದ್ಯುತ್ ವ್ಯತ್ಯಯವಾಗದಂತೆ ಹೆಸ್ಕಾಂ ಅಧಿಕಾರಿಗಳೊಂದಿಗೆ, ಬಸ್ ಅನಾನುಕೂಲವಾಗದಂತೆ ಸಾರಿಗೆ ಅಧಿಕಾರಿಗಳೊಂದಿಗೆ, ಬೇಸಿಗೆಯ ಸಮಯದಲ್ಲಿ ಮಕ್ಕಳಿಗೆ ಅನಾರೋಗ್ಯ ಉಂಟಾಗದಂತೆ ಮುನ್ನೆಚ್ಚರಿಕೆ ಕೈಗೊಳ್ಳಲು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಈಗಾಗಲೇ ಮಾತುಕತೆ ನಡೆಸಲಾಗಿದೆ ಎಂದ ಬಿಇಓ ರವರು, ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಲಿ ಬೆಂಗಳೂರು ಇವರು ಹೊರಡಿಸಿರುವ ಪರೀಕ್ಷಾ ಮಾರ್ಗಸೂಚಿಯಂತೆ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಂಯೋಜಕ ನಾಗರಾಜ ಗಡಾದ, ಹನುಮೇಶ ಪಂಚಾಳ, ಸತೀಶ ಬಿ ಎಸ್, ಎಸ್ ಬಿ ಹಳಿಗೌಡರ, ಆರ್ ವಿ ಯರಗಟ್ಟಿ ಉಪಸ್ಥಿತರಿದ್ದರು.