ಬೆಳಗಾವಿ : ಕರ್ತವ್ಯ ನಿರತ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಭದ್ರತೆ ಒದಗಿಸುವುದು ಮತ್ತು ಇತ್ತೀಚೆಗೆ ಬೆಂಗಳೂರು ಪಾಲಿಕೆಯ ಸಿಬ್ಬಂದಿಯ ಮೇಲೆ ನಡೆದ ಹಲ್ಲೆ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬೆಳಗಾವಿ ಮಹಾನಗರ ಪಾಲಿಕೆ ಸಿಬ್ಬಂದಿ ಆಗ್ರಹಿಸಿದ್ದಾರೆ.
ಈ ಕುರಿತು ಬುಧವಾರ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಆಯುಕ್ತರಾದ ಕಾರ್ತಿಕ ಎಂ. ಅವರ ಮೂಲಕ ನಗರಾಭಿವೃದ್ಧಿ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು.
ಬೆಂಗಳೂರು ಶಿವಾಜಿನಗರ ಬಸ್ ನಿಲ್ದಾಣದ ಹತ್ತಿರ ಇತ್ತೀಚೆಗೆ ಬೆಂಗಳೂರು ಪಾಲಿಕೆಯಿಂದ ನಡೆದ ಪಾದಚಾರಿ ಮಾರ್ಗ ಅತಿಕ್ರಮಣ ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಅಧಿಕಾರಿಗಳು,ಮಹಿಳಾ ಅಭಿಯಂತರರು, ಚಾಲಕರು ಹಾಗೂ ಸಿಬ್ಬಂದಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವುದನ್ನು ಮನವಿಯಲ್ಲಿ ತೀವ್ರವಾಗಿ ಖಂಡಿಸಲಾಗಿದೆ.
ಸಾರ್ವಜನಿಕರ ಹಿತ ದೃಷ್ಟಿಯಿಂದ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಯ ಜೀವ ರಕ್ಷಣೆ ಸರ್ಕಾರದ ಜವಾಬ್ದಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಸೂಕ್ತ ಪೊಲೀಸ್ ಭದ್ರತೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳೂ ಸೇರಿದಂತೆ ಸಮಸ್ತ ಸಿಬ್ಬಂದಿ ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಪಾಲಿಕೆ ಅಭಿಯಂತರ, ಪರಿಷತ್ ಕಾರ್ಯದರ್ಶಿ ಲಕ್ಷ್ಮೀ ನಿಪ್ಪಾಣಿಕರ್, ಕಂದಾಯ ನೌಕರರ ಸಂಘದ ಅಧ್ಯಕ್ಷ ಎಲ್ಲೇಶ್ ಬಚ್ಚಲಪುರಿ ಸೇರಿದಂತೆ ಸಮಸ್ತ ಅಧಿಕಾರಿಗಳು ಸಿಬ್ಬಂದಿ ಉಪಸ್ಥಿತರಿದ್ದರು.