ಸಿಂದಗಿ – ಸಿಂದಗಿ ಹಾಗೂ ಆಲಮೇಲ ತಾಲೂಕುಗಳನ್ನು ಕೇಂದ್ರ ಸರ್ಕಾರದ ನಿಯಮಾವಳಿಗಳನ್ವಯ ರಾಜ್ಯ ಸರ್ಕಾರ ಬರಪೀಡಿತ ತಾಲೂಕುಗಳೆಂದು ಘೋಷಿಸಿದೆ ಎಂದು ಶಾಸಕ ಅಶೋಕ ಮನಗೂಳಿ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ ಅವರು ಈ ವರ್ಷ ತೀವ್ರ ಮಳೆ ಕೊರತೆಯನ್ನು ಸಿಂದಗಿ ಹಾಗೂ ಆಲಮೇಲ ತಾಲೂಕುಗಳು ಎದುರಿಸಿದ ಪರಿಸ್ಥಿತಿ ನಿರ್ಮಾಣವಾಗಿದ್ದು, ಎರಡು ತಾಲೂಕುಗಳ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ನಿಯಮಾವಳಿಗಳಂತೆ ಕಾಲಕಾಲಕ್ಕೆ ಲಭ್ಯವಾಗುವ ಸ್ಯಾಟಲೈಟ್ ಮಾಹಿತಿ ಹಾಗೂ ಇತರ ಮಾನದಂಡಗಳ ಆಧಾರದ ಮೇಲೆ ಬರಪೀಡಿತ ತಾಲೂಕುಗಳನ್ನು ರಾಜ್ಯ ಸರಕಾರ ಘೋಷಿಸಿದೆ. ಆಲಮೇಲ ಮಧ್ಯಮ ಬರಪೀಡಿತ ಹಾಗೂ ಸಿಂದಗಿಯನ್ನು ಕಠಿಣ ಬರಪೀಡಿತ ತಾಲೂಕು ಎಂದು ವರ್ಗೀಕರಿಸಲಾಗಿದೆ.
ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ, ವಿಶೇಷವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದರು.
ಬರಪೀಡಿತ ತಾಲೂಕುಗಳ ಘೋಷಣೆಗೆ ಆಗ್ರಹಿಸಿ ವಿವಿಧ ತಾಲೂಕುಗಳಲ್ಲಿ ರೈತ ಸಂಘಟನೆಗಳು ನಡೆಸುತ್ತಿರುವ ಹೋರಾಟಗಳನ್ನು ಸ್ಥಗಿತಗೊಳಿಸುವಂತೆ ನಾನು ಮನವಿ ಮಾಡುತ್ತೇನೆ. ರೈತರ ಸಂಕಷ್ಟಕ್ಕೆ ಸ್ಪಂದಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ರೈತರ ಹಿತಾಸಕ್ತಿಯನ್ನು ಕಾಪಾಡಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ನಾವು ಬದ್ಧರಾಗಿದ್ದೇವೆ ಎಂದು ಶಾಸಕ ಅಶೋಕ ಮನಗೂಳಿ ತಿಳಿಸಿದ್ದಾರೆ.