ಸಿಂದಗಿ: ಗ್ರಾಮೀಣ ಭಾಗದ ಯುವಜನರಲ್ಲಿ ಕ್ರೀಡಾಸಕ್ತಿ ಬೆಳೆಸುವುದರ ಜೊತೆಗೆ ಅಡಗಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವ ಉದ್ದೇಶದಿಂದ ಆಕಾಶ್ ಬಿರಾದಾರ ಫೌಂಡೇಶನ್ ವತಿಯಿಂದ ೨ನೇ ಆಕಾಶ್ ಬಿರಾದಾರ ಮ್ಯಾರಥಾನ್-೨೦೨೬ ನ.೧೯ರ ಗುರುವಾರ ಬೆಳಿಗ್ಗೆ ೭ಗಂಟೆಗೆ ಆಲಮೇಲ ತಾಲೂಕಿನ ಸೋಮಜಾಳ ಗ್ರಾಮದಲ್ಲಿ ಮ್ಯಾರಥಾನ್ ಆರಂಭವಾಗಲಿದೆ.
ಸ್ಪರ್ಧೆಯಲ್ಲಿ ೧೭ ವರ್ಷದೊಳಗಿನ ಯುವಕರಿಗೆ ೫ ಕಿ.ಮೀ. ಓಟ ಹಾಗೂ ೨೦ ವರ್ಷದೊಳಗಿನ ಯುವಕರಿಗೆ ೧೦ಕಿ.ಮೀ. ಓಟದ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಮ್ಯಾರಥಾನ್ ಓಟದ ಆಯೋಜಕ ಕಲ್ಯಾಣಿ ಬಿರಾದಾರ ತಿಳಿಸಿದರು.
ಸಿಂದಗಿ ನಗರದ ಖಾಸಗಿ ಹೋಟೆಲ್ವೊಂದರಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎರಡೂ ವಿಭಾಗಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ತಮ್ಮ ಸಾಮರ್ಥ್ಯ, ವೇಗ ಹಾಗೂ ದೈಹಿಕ ಕ್ಷಮತೆಯನ್ನು ಪ್ರದರ್ಶಿಸಲು ಉತ್ತಮ ಅವಕಾಶ ಕಲ್ಪಿಸಲಾಗಿದೆ. ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವವರಿಗೆ ರೂ.೫ಸಾವಿರ, ದ್ವಿತೀಯ ಸ್ಥಾನ ಪಡೆಯುವವರಿಗೆ ರೂ.೩ಸಾವಿರ ಹಾಗೂ ತೃತೀಯ ಸ್ಥಾನ ಪಡೆಯುವವರಿಗೆ ರೂ.೨ಸಾವಿರ ಬಹುಮಾನ ನೀಡಲಾಗುವುದು. ಸಿಂದಗಿ ತಾಲೂಕು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮ್ಯಾರಥಾನ್ನಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು.
ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗಾಗಿ ಆಸಕ್ತರು ೯೯೪೫೧೭೩೧೭೨ ಸಂಖ್ಯೆಗೆ ಸಂಪರ್ಕಿಸಬಹುದು.
ಈ ವೇಳೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರು ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಅನೇಕ ಪ್ರತಿಭಾವಂತ ಕ್ರೀಡಾಪಟುಗಳಿದ್ದರೂ ಸೂಕ್ತ ಅವಕಾಶ ಹಾಗೂ ಪ್ರೋತ್ಸಾಹದ ಕೊರತೆಯಿಂದಾಗಿ ಅವರು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ಸಾಧ್ಯವಾಗುತ್ತಿಲ್ಲ. ಇಂತಹ ಪ್ರತಿಭೆಗಳನ್ನು ಗುರುತಿಸಿ, ಕ್ರೀಡಾ ಕ್ಷೇತ್ರದಲ್ಲಿ ಮುಂದುವರಿಯಲು ಪ್ರೇರಣೆ ನೀಡುವ ಉದ್ದೇಶದಿಂದ ಬಿರಾದಾರ ಫೌಂಡೇಶನ್ ಮ್ಯಾರಥಾನ್ ಅಂತಹ ಕ್ರೀಡೆಯನ್ನು ಆಯೋಜಿಸುತ್ತಿರುವುದು ಹೆಮ್ಮೆಯ ಸಂಗತಿ. ಮುಂದಿನ ದಿನಗಳಲ್ಲಿಯೂ ಯುವಜನರ ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿ ಎಂದರು.